X Close
X

ಶಿರಾದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ


Vijayendra
Bengaluru:

ಚಿತ್ರದುರ್ಗ: ಶಿರಾದಲ್ಲಿ ನಡೆಯುತ್ತಿರುವ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆಎಂದು ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ. 

ಮಾದಾರ ಗುರುಪೀಠಕ್ಕೆ ಭೇಟಿ ನೀಡಿದ್ದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಲ್ಲಿ ವಿರೋಧ ಪಕ್ಷದ ನಾಯಕರು ತಮ್ಮ ಮೇಲೆ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಗಳು ಸೋಲನ್ನು ಒಪ್ಪಿಕೊಂಡ ಪರಿಯನ್ನು ಹೇಳುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಏನು ಮಾಡುತ್ತಿದೆ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ಉಪ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿರುವುದು ಪ್ರತಿಪಕ್ಷದವರಿಗೆ ನಿದ್ದೆ ಕೆಡಿಸಿದೆ. ಈಗಾಗಲೇ ಕೆ.ಆರ್.ಪೇಟೆ ಚುನಾವಣೆ ಗೆದ್ದು ಪಕ್ಷದ ವರ್ಚಸ್ಸಿಗೆ ಜನ ನೀಡಿದ ಬೆಂಬಲ ಸಾಬೀತುಪಡಿಸಿದ್ದೇವೆಂದು ತಿಳಿಸಿದ್ದಾರೆ. 

ಇದೇ ವೇಳೆ ಯಡಿಯೂರಪ್ಪ ಅವರ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಯತ್ನಾಳ ಹೇಳಿಕೆ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳನ್ ಕುಮಾರ್ ಕಟೀಲ್ ಅವರು ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಅವರೇ ರಾಜ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆಂದು ತಿಳಿಸಿದ್ದಾರೆ. ಹಿರಿಯ ನಾಯಕರಾದ ಕೆ.ಎಸ್.ಈಶ್ವರಪ್ಪ, ಸಿಟಿ ರವಿ ಕೂಡ ಹೇಳಿಕೆ ನೀಡಿದ್ದಾರೆಂದಿದ್ದಾರೆ.